ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯ ಬೈಂದೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಸೋಮವಾರ ಜಾಮೀನು ಸಿಕ್ಕಿದೆ. ಮಂಗಳವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆಯಿದೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್‌ನಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದಾಗಿ ಆರೋಪ ಕೇಳಿಬಂದಿತ್ತು.
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದರು. ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜಾಮೀನು ಸಿಕ್ಕಿದೆ.
ಚೈತ್ರಾ, ಶ್ರೀಕಾಂತ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂದು ಆದೇಶವನ್ನು ಹೊರಡಿಸಲಾಗಿದೆ. ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ.