ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜ. 2 ರಿಂದಲೇ ಮೋಡ ಕವಿದ ವಾತಾವರಣವಿದ್ದು, ನಿನ್ನೆ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು IMD ತಿಳಿಸಿದೆ.
ಸಮುದ್ರ ಮಟ್ಟದಲ್ಲಿ ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಅರಬಿ ಸಮುದ್ರದ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದಾಗಿ ನಿಮ್ನ ಒತ್ತಡ ನಿರ್ಮಾಣ ಆಗಿದೆ. ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಜ. 4ರಂದು “ಎಲ್ಲೋ ಅಲರ್ಟ್’ ಘೊಷಿಸಲಾಗಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಇದರಿಂದಾಗಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ ಇಳಿಕೆಯಾಗಬಹುದು ಎನ್ನುತ್ತಾರೆ ಹವಾಮಾನ ಇಲಾಖೆ ತಜ್ಞರು.