ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಎಂಟು ಜನರಿಗೆ ಪರಿಹಾರ ನೀಡಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಲಾಡ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಘೋಷಣೆ ಮಾಡಲಾಗಿದೆ. ಸಂತೋಷ್ ಲಾಡ್ ಫೌಂಡೇಶನ್‌ನಿಂದಲೂ ಮೃತರ ಕುಟುಂಬಕ್ಕೆ ಧನ ಸಹಾಯ ಮಾಡಲಾಗಿದೆ.
ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದಾರೆ.