ಬೆಂಗಳೂರು: ನಟ ಯಶ್ ಜನ್ಮದಿನದ ಅಂಗವಾಗಿ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹2 ಲಕ್ಷ ಪರಿಹಾರ ಘೋಷಿಸಿದೆ.
ಈ ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಪ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬದುಕಿ ಬಾಳಬೇಕಿದ್ದ ಯುವಕರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ತಲಾ ₹2 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
ಲಕ್ಷ್ಮೀಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಅಂಬೇಡ್ಕರ್ ನಗರದ ಯಶ್ ಅಭಿಮಾನಿಗಳು ಭಾನುವಾರ ರಾತ್ರಿ ಬೃಹತ್ ಗಾತ್ರದ ಪ್ಲೆಕ್ಸ್ ಅಳವಡಿಸುವುದಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಕಟೌಟ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಲಕ್ಷ್ಮೀಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.