ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್‌ಸಿ-1) ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 6 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ವಿಜಯ್ ಪ್ರವೀಣ್ ಕುಟಿನ್ಹಾ (29) ಶಿಕ್ಷೆಗೊಳಗಾದ ಅಪರಾಧಿ.
2022ರ ಎ.20ರಂದು ಸಂಜೆ 4ಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿ ಕೊಣಾಜೆ ಠಾಣಾ ವ್ಯಾಪ್ತಿಯ ಅಂಬ್ಲಿಮೊಗರು ಗ್ರಾಮದ ಅಂಗಡಿಯೊಂದಕ್ಕೆ ತಿಂಡಿ ಖರೀದಿಸಲೆಂದು ಬಂದಿದ್ದಳು. ಆಗ ಬೀಡಿ ಖರೀದಿಸಲು ಬಂದಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಶರಣಪ್ಪ ಭಂಡಾರಿ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಆರೋಪಿಗೆ ಪೋಕ್ಸೋ ಕಾಯಿದೆಯ ಕಲಂ 10ರ ಅಡಿಯಲ್ಲಿ 6 ವರ್ಷಗಳ ಕಠಿನ ಸಜೆ ಹಾಗೂ 20,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ, ಭಾರತೀಯ ದಂಡ ಸಂಹಿತೆಯ ಕಲಂ 354ರ ಅಡಿಯಲ್ಲಿ 3 ವರ್ಷಗಳ ಕಠಿನ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 3 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಅಲ್ಲದೆ ಸಂತ್ರಸ್ತ ಬಾಲಕಿಗೆ ಸರಕಾರ 1 ಲ.ರೂ.ಗಳನ್ನು ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕೊà ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.