ಕನ್ನಡ: ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣದಲ್ಲಿ ನಡೆದಿದೆ. ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನೂತನವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಭಂಡಾರ ಮನೆಯನ್ನು ಧ್ವಂಸಗೊಳಿಸಲಾಗಿದೆ.

ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾರ್ ಪುಟ್ಟರಾಜು, ಎಸಿಪಿ ಧನ್ಯಾ ನಾಯಕ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಭಾರೀ ಸಂಖ್ಯೆಯಲ್ಲಿ ಭಕ್ತರ ಜಮಾವಣೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರ ಜೊತೆಗೆ ಎರಡು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.